ಕಾನೂನು ಸುವ್ಯವಸ್ಥೆ: ಪೊಲೀಸ್ ಅಧಿಕಾರಿಗಳ ನಡೆಗೆ ಗರಂ ಆದ ಪರಂ!
ಸುದ್ದಿ ಸಾಗರ

ಕಾನೂನು ಸುವ್ಯವಸ್ಥೆ: ಪೊಲೀಸ್ ಅಧಿಕಾರಿಗಳ ನಡೆಗೆ ಗರಂ ಆದ ಪರಂ!

'ಗಾರ್ಮೆಂಟ್ ಮಹಿಳೆಯರ ಪ್ರತಿಭಟನೆ' ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

"ಯಾರೇ ಆದರೂ ಸರಿ, ಕಾನೂನು ಸುವ್ಯವಸ್ಥೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ.ಕಾನೂನು ವ್ಯವಸ್ಥೆಗೆ ದಕ್ಕೆಯಾದರೇ ಹಿರಿಯ ಅಧಿಕಾರಿಗಳೇ ಅದಕ್ಕೆ ಹೊಣೆ," ಎಂದು ಗೃಹಸಚಿವರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಅಲ್ಲದೆ, "ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳು ಎಚ್ಚರವಹಿಸಬೇಕು. ನೀವು ಎಚ್ಚರವಹಿಸಿದರೇ ಕಿರಿಯ ಅಧಿಕಾರಿಗಳು ಎಚ್ಚರ ವಹಿಸುತ್ತಾರೆ. ಹಿರಿಯ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ನಿರ್ವಹಿಸಲಿ," ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಸೇರಿದಂತೆ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿದ್ದರು. ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಪಿಎಫ್ ನೀತಿ ಬದಲಾವಣೆ ವಿರೋಧಿಸಿ ಕಾರ್ಮಿಕರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಸರ್ಕಾರಿ ಬಸ್‍ಗಳು ಸೇರಿದಂತೆ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿತ್ತು.ಈ ಕುರಿತು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಸಚಿವರ ಕಿವಿಮಾತಿನ ಬೆನ್ನಲ್ಲೇ ಪೊಲೀಸರು ಪ್ರಕರಣ ಸಂಬಂಧ ಬಂಧನ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ. ಈವರೆಗೆ 200ಕ್ಕೂ ಹೆಚ್ಚು ಗಾರ್ಮೆಂಟ್ಸ್ ನೌಕರರನ್ನು ಬಂಧಿಸಿದ್ದಾರೆ ಎಂದು ಮೂಲಗಳು ಹೇಳಿವೆ.