ಕೊಡಗು ಪ್ರವಾಹ: 3,500ಕ್ಕೂ ಹೆಚ್ಚು ಜನರ ರಕ್ಷಣೆ, ಪ್ರಧಾನಿಯಿಂದ ನೆರವಿನ ಭರವಸೆ
ಸುದ್ದಿ ಸಾರ

ಕೊಡಗು ಪ್ರವಾಹ: 3,500ಕ್ಕೂ ಹೆಚ್ಚು ಜನರ ರಕ್ಷಣೆ, ಪ್ರಧಾನಿಯಿಂದ ನೆರವಿನ ಭರವಸೆ

ಸಿ.ಎಂ. ಕುಮಾರಸ್ವಾಮಿ ಜತೆಗೆ ಭಾನುವಾರ ಮಾತನಾಡಿರುವ ಪ್ರಧಾನಿ ಮೋದಿ, ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದಿದ್ದಾರೆ.

ಕೊಡಗು ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪರಿಹಾರ ಕಾರ್ಯಗಳಿಗೆ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಭಾನುವಾರ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವ ಮೋದಿ, ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದಿದ್ದಾರೆ, ಈವರೆಗೆ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಂದ 3,500ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಸೇನಾ ಸಿಬ್ಬಂದಿ, ಎನ್‌ಡಿಆರ್‌ಎಫ್ ಮತ್ತು ಇತರೆ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ರಸ್ತೆ ಮೇಲೆ ಗುಡ್ಡ ಕುಸಿತವಾಗಿರುವ ಸ್ಥಳಗಳಲ್ಲಿ ರಕ್ಷಣಾ ಸಿಬ್ಬಂದಿ ಹಾಗೂ ಸ್ವಯಂಸೇವಕರು ಮಣ್ಣನ್ನು ತೆರವುಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಭಾನುವಾರವೂ ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಪಿರಿಯಾಪಟ್ಟಣದಿಂದ ಮಡಿಕೇರಿಗೆ ಹೋಗುವ ಮಾರ್ಗದಲ್ಲಿ ಆವರ್ತಿ, ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗಳಿಗೆ ಕುಮಾರಸ್ವಾಮಿ ಭೇಟಿ ನೀಡಿದ್ದರು,

ಸಾಯಿ ಬಡಾವಣೆಯಲ್ಲಿ ಸುಮಾರು 200 ಮನೆಗಳು ಹಾಗೂ ಕುವೆಂಪು ಬಡಾವಣೆಯಲ್ಲಿ ಸುಮಾರು 400 ಮನೆಗಳು ಜಲಾವೃತವಾಗಿವೆ. ಸಂತ್ರಸ್ತರಿಗೆ ಅಗತ್ಯ ನೆರವು ಕಲ್ಪಿಸುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.