samachara
www.samachara.com
ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಓರ್ವ ಸಾವು, ಅವಶೇಷಗಳಡಿ 40 ಜನ?
ಸುದ್ದಿ ಸಾರ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಓರ್ವ ಸಾವು, ಅವಶೇಷಗಳಡಿ 40 ಜನ?

ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಇಂದು ಸಂಜೆ ವೇಳೆಗೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಕಾರ್ಮಿಕರಾಗಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರು ಕಟ್ಟಡದ ಒಳಗೆ ಸಿಲುಕಿಕೊಂಡಿದ್ದಾರೆ

Team Samachara

ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದಿದ್ದು, 40ಕ್ಕೂ ಹೆಚ್ಚು ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಇಂದು ಸಂಜೆ ವೇಳೆಗೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಕಾರ್ಮಿಕರಾಗಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರು ಕಟ್ಟಡದ ಒಳಗೆ ಸಿಲುಕಿಕೊಂಡಿದ್ದಾರೆ.

ಸದ್ಯದ ಮಾಹಿತಿಗಳ ಪ್ರಕಾರ ಒಬ್ಬರು ಸಾವನ್ನಪ್ಪಿದ್ದು, 6 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್‌ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡದ ಅವಶೇಷದಡಿಯಲ್ಲಿ ಇನ್ನೂ 40 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ ಎಂದು ಅಂದಾಜು ಮಾಡಲಾಗಿದೆ.

ಘಟನೆ ಬಗ್ಗೆ ಟ್ಟೀಟ್‌ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, “ಕಟ್ಟಡ ಕುಸಿದ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಈ ಬಗ್ಗೆ ಗಮನ ಹರಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಸಂಪನ್ಮೂಲಗಳನ್ನು ಮತ್ತು ಪರಿಣತರನ್ನು ವಿಶೇಷ ವಿಮಾನದ ಮೂಲಕ ಧಾರವಾಡಕ್ಕೆ ಕಳುಹಿಸುವಂತೆ ಸೂಚಿಸಿದ್ದೇನೆ,” ಎಂದು ತಿಳಿಸಿದ್ದಾರೆ.

ಅವಶೇಷಗಳಡಿಯಲ್ಲಿ ಸಿಲುಕಿರುವವರಿಗಾಗಿ ಅಗ್ನಿ ಶಾಮಕ, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇವರಿಗೆ ಸ್ಥಳೀಯರೂ ಸಹಕಾರ ನೀಡುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.